ಸರ್ಕಾರದ ಯೋಜನೆಗಳ ಫಲಾನುಭವಿಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಆ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳಲ್ಲಿ ಮಹಿಳಾ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಲು ಅಧಿಕಾರಿ ಮಟ್ಟದಲ್ಲಿ ಪ್ರಯತ್ನ ಪಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಕಾರವನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಅವುಗಳ ಪ್ರಗತಿ ಪರಿಶೀಲನೆ ನಡೆಸಿ ಬಹುತೇಕ ಕಾಮಗಾರಿಗಳು ಶೇ.೯೦ ರಷ್ಟು ಪೂರ್ಣಗೊಂಡಿದ್ದು, ಮಾರ್ಚ್ ಅಂತ್ಯದ ವೇಳೆಗೆ ಶೇ.೧೦೦ ರಷ್ಟು ಅಭಿವೃದ್ಧಿಯನ್ನು ಸಾಧಿಸಬೇಕು ಎಂದು ತಿಳಿಸಿದರು.
ತೋಟಗಾರಿಕೆ ಇಲಾಖೆಯು ಶೇ.೯೯.೯೨ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದಕ್ಕಾಗಿ ಶ್ಲಾಘಿಸಿದರು. ರೇಷ್ಮೆ ಇಲಾಖೆಯಲ್ಲಿ ಶೇ.೮೫ರಷ್ಟು ಪ್ರಗತಿ ಸಾಧಿಸಲಾಗಿದೆ. ಮೀನುಗಾರಿಕೆ ಇಲಾಖೆಯಲ್ಲಿ ಶೇ. ೯೮ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಈ ಬಗ್ಗೆ ಮೆಚ್ಚುಗೆ
ವ್ಯಕ್ತಪಡಿಸಿ ಮಾತನಾಡಿದ ಅವರು ಉಳಿದ ಎಲ್ಲಾ ಇಲಾಖೆಗಳು ಈ ಇಲಾಖೆಗಳನ್ನು ಮಾದರಿಯಾಗಿ ತೆಗೆದುಕೊಂಡು ಶೀಘ್ರವಾಗಿ ಗುರಿಯನ್ನು ಸಾಧಿಸಬೇಕು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಕೋವಿಡ್-೧೯ ನ ಉಪ ತಳಿಗಳ ಹರಡುವಿಕೆ ಬಗ್ಗೆ ಮುಂಜಾಗ್ರತೆ ವಹಿಸಿ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲು ಸೂಚಿಸಿದರು.ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಲಭ್ಯವಿರುವ ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ಬೇಡಿಕೆ ವಿವರಗಳನ್ನು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕೋಲಾರ, ಮುಳಬಾಗಿಲು ಹಾಗೂ ಮಾಲೂರು ತಾಲ್ಲೂಕುಗಳಲ್ಲಿ ಹೊಸದಾಗಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದು. ಅಂಗನವಾಡಿ ಕಟ್ಟಡಗಳಿಗೆ ಅಗತ್ಯವಾದ ದುರಸ್ಥಿ ಕಾರ್ಯಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.ಪಶುಪಾಲನಾ ಇಲಾಖೆ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಈವರೆಗೆ ಸಾಧಿಸಿರುವ ಪ್ರಗತಿಯ ಮಾಹಿತಿಯನ್ನು ಪಡೆದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ.ಸಿ.ವಿ, ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.