ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ನೀಡಿರುವ ಹೇಳಿಕೆಯನ್ನು ಖಂಡಿಸಿ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಅಶ್ವತ್ಥ ನಾರಾಯಣ ವಿರುದ್ಧ ಘೋಷಣೆ ಕೂಗಿದರಲ್ಲದೆ, ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು. ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತು ಸಚಿವರು ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ. ಅವಹೇಳನಕಾರಿಯಾಗಿ ಮಾತನಾಡಿದ ಸಚಿವರು, ಕೊಲೆಗೆ ಪ್ರಚೋದನೆ ನೀಡಿದ್ದಾರೆ. ಸಚಿವರೂ ಸೇರಿದಂತೆ ಬಿಜೆಪಿಯ ಅನೇಕ ಮುಖಂಡರು ಇಂತಹ ಪ್ರಚೋದನೆಯಲ್ಲಿ ತೊಡಗಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆಯೇ ನಾಲಿಗೆ ಹರಿಬಿಟ್ಟು ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಶ್ವತ್ಥ ನಾರಾಯಣ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ವಿರೋಧ ಪಕ್ಷದ ನಾಯಕರ ಬಗ್ಗೆ ಮಾತನಾಡುವ ಮುನ್ನ ಆಲೋಚಿಸಬೇಕಿತ್ತು. ಸಮಾಜದಲ್ಲಿ ಒಡಕು ಸೃಷ್ಟಿಸಿ ಸಿದ್ದರಾಮಯ್ಯ ಅವರ ವಿರುದ್ಧ ಜನರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ.
ಸೋದರ ಭಾವನೆಯಿಂದ ಬದುಕುವ ಜನರ ಭಾವನೆಗಳಿಗೆ ಬೆಂಕಿ ಇಡುವ ಕೆಲಸ ಮಾಡುವುದು ಅಕ್ಷಮ್ಯ. ಇಂತಹ ಕೃತ್ಯವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಪ್ರತಿಭಟನಕಾರರು ಕಿಡಿಕಾರಿದರು.
ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಶಾಂತಿ ಕದಡುವ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಂ.ಲಕ್ಷ್ಮಿನಾರಾಯಣ್, ಕಾರ್ಯಾದ್ಯಕ್ಷ ಊರು ಬಾಗಿಲು ಶ್ರೀನಿವಾಸ್, ಮುಖಂಡರಾದ ಪ್ರಸಾದ್ ಬಾಬು, ಉದಯ್ ಶಂಕರ್, ಜಯದೇವ್, ಮುಂತಾದವರು ವಹಿಸಿದ್ದರು.