• Fri. May 3rd, 2024

PLACE YOUR AD HERE AT LOWEST PRICE

ಕನ್ನಡಿಗರು ಕಷ್ಟಪಟ್ಟು ಕಟ್ಟಿ ಬೆಳೆಸಿದ ಸಂಸ್ಥೆ ಕೆಎಂಎಫ್ (ನಂದಿನಿ)ನ್ನು ನಾಶಪಡಿಸಿ ಗುಜರಾತ್‌ನ ಅಮೂಲ್ ಸಂಸ್ಥೆಯನ್ನು ಅಕ್ರಮವಾಗಿ, ಅನೈತಿಕವಾಗಿ ಕರ್ನಾಟಕದ ಒಳಗೆ ತರಲಾಗುತ್ತಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ಆರೋಪಿಸಿದರು.

ಕೋಲಾರ ನಗರದ ಕೆಎಸ್‌ಆರ್‌ಟಿಸಿ ವೃತ್ತದಲ್ಲಿ ಅಮೂಲ್ ಉತ್ಪನ್ನಗಳನ್ನು ರಸ್ತೆಗೆಸೆದು ಅಮೂಲ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿ ಮಾತನಾಡಿ, ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ ಎಂದರು.

ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ.

ಕರ್ನಾಟಕ ರಕ್ಷಣಾ ವೇದಿಕೆ ಕೋಲಾರ ಜಿಲ್ಲಾ ಘಟಕವು ಕೋಲಾರ ವಯಾ ಬೇತಮಂಗಲ ಮುಖ್ಯ ರಸ್ತೆಯಲ್ಲಿ ಈ ಹಿಂದೆ ಆಂಧ್ರಪ್ರದೇಶದ ಹೆರಿಟೇಜ್ ಕಲಬೆರೆಕೆ ಹಾಲಿನ ವಾಹನವನ್ನು ತಡೆದು ಪ್ರತಿಭಟಿಸಿ ಇದರ ವಿರುದ್ಧ ಹೋರಾಟ ಸಂಘಟಿಸಿ ನಿಲ್ಲಿಸುವಲ್ಲಿ ಯಶಸ್ವಿಯಾಗಿತ್ತು. ಅದೇ ರೀತಿ ಈಗ ಅಮೂಲ್ ವಿರುದ್ಧವೂ ಚಳವಳಿ ರೂಪಿಸಲಿದೆ. ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಸಿದರು.

ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರಾಂಡ್ ಅನ್ನು ಮುಗಿಸಲೆಂದೇ ಅಮೂಲ್ ಹಾಲು-ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ. ಕರ್ನಾಟಕದ ರೈತರನ್ನು ಭಿಕ್ಷುಕರನ್ನಾಗಿಸುವ ಸಂಚು ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನಿಗಳು, ಕೆರಳಿ ನಿಂತರೆ ಇಂಥ ಸಂಚುಗಳನ್ನು ವಿಫಲಗೊಳಿಸುವುದು ಅವರಿಗೆ ಗೊತ್ತಿದೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಅಮೂಲ್ ನೊಂದಿಗೆ ನಂದಿನಿ ಸೇರಿದಂತೆ ದೇಶದ ವಿವಿಧ ಹಾಲು ಉತ್ಪಾದಕ ಸಂಸ್ಥೆಗಳನ್ನು ವಿಲೀನಗೊಳಿಸುವ ಮಾತುಗಳನ್ನು ಆಡಿದ ಬೆನ್ನಲ್ಲಿ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಕೇಂದ್ರ ಸರ್ಕಾರವೇ ಪಿತೂರಿಯ ಹಿಂದಿದೆ ಎಂಬುದು ಸ್ಪಷ್ಟವಾಗುತ್ತದೆ. ಗುಜರಾತಿ ಲಾಬಿಗೆ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಕಾಲ ಇದಾಗಿದೆ.

ಕರ್ನಾಟಕದ ಬಹುಪಾಲು ರೈತರು ಹಾಲು ಉತ್ಪಾದನೆಯನ್ನು ನೆಚ್ಚಿಕೊಂಡು ಬದುಕುತ್ತಿದ್ದಾರೆ. ಅವರನ್ನು ಗುಜರಾತಿ ವ್ಯಾಪಾರಿಗಳ ಅಡಿಯಾಳಾಗಿ ಮಾಡುವ ಹುನ್ನಾರವೇ ಅಮೂಲ್-ನಂದಿನಿ ವಿಲೀನದ ಪ್ರಸ್ತಾಪ. ಅದನ್ನು ಜಾರಿಗೊಳಿಸುವ ಸಲುವಾಗಿಯೇ ಅಮೂಲ್ ಹಾಲು-ಮೊಸರು ರಾಜ್ಯವನ್ನು ಪ್ರವೇಶಿಸುತ್ತಿದೆ.
ಅಮೂಲ್ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಽಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ?
ಲಾಭದಲ್ಲಿದ್ದ ಕರ್ನಾಟಕದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಲಾಯಿತು. ಅದೇ ರೀತಿ ಅಮೂಲ್ ಜೊತೆಗೆ ನಂದಿನಿಯನ್ನು ವಿಲೀನಗೊಳಿಸುವ ಹುನ್ನಾರ ನಡೆದಿದೆ. ಕರ್ನಾಟಕದ ರೈತರ ಬದುಕಿಗೆ ಕೊಳ್ಳಿ ಇಡಲು ಬಂದರೆ ಕನ್ನಡಿಗರು ದಂಗೆ ಏಳುತ್ತಾರೆ ಎಂಬುದನ್ನು ಮರೆಯಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆದ್ದರಿಂದ ಯಾವುದೇ ಕಾರಣಕ್ಕೂ ಕೋಲಾರ ಜಿಲ್ಲೆಯಲ್ಲಿ ಅಮೂಲ್ ಹಾಲು – ಮೊಸರು, ಅಮೂಲ್ ಸಂಸ್ಥೆಯ ಯಾವ ಉತ್ಪನ್ನಗಳೂ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಮುಖಂಡರಾದ ವಿ.ಮುನಿರಾಜು, ಮೆಹಬೂಬ್, ಎಸ್.ಮಂಜುನಾಥ್, ಮುರಳಿಕೃಷ್ಣ, ರಾಮ್ ಪ್ರಸಾದ್, ಕೆ.ಶಂಕರರೆಡ್ಡಿ, ವೆಂಕಟೇಗೌಡ, ಶೇಖರ್, ಬಿ.ಎಚ್.ಸಂಪತ್ ಕುಮಾರ್, ಕೆ.ಎಸ್.ನಾಗೇಶ್‌ಬಾಬು, ನಾಗರತ್ನಮ್ಮ, ವಿ.ವಿ.ಮಂಜುನಾಥ್, ವಿ.ಮಂಜುನಾಥ್, ಕೋದಂಡರಾಮಯ್ಯ, ದಿನ್ನೆಹೊಸಹಳ್ಳಿ ಆಂಜಿ, ಶಶಿಕುಮಾರ್ ವಹಿಸಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!