PLACE YOUR AD HERE AT LOWEST PRICE
ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಪಿ ನಗರ ನಿವಾಸಕ್ಕೆ ವಿದ್ಯುತ್ ಅಲಂಕಾರ ಮಾಡಿಸಿದ್ದರು. ಇದಕ್ಕೆ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು.
ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಟೀಕಿಸಿ, ಕಾಂಗ್ರೆಸ್ ವಿಡಿಯೋ ದಾಖಲೆಯೊಂದಿಗೆ ಟ್ವೀಟ್ ಮಾಡಿತ್ತು.
ಇದರ ಬೆನ್ನಲ್ಲೇ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ‘ಅಚಾತುರ್ಯ ನಡೆದಿದೆ. ದಂಡ ಕಟ್ಟಲು ಸಿದ್ಧ’ ಎನ್ನುವ ಮೂಲಕ ಕಳ್ಳತನ ನಡೆದಿರುವುದನ್ನು ಒಪ್ಪಿಕೊಂಡಿದ್ದರು.
ಇದು ರಾಜಕೀಯ ಚರ್ಚೆಗೆ ವೇದಿಕೆಯೊದಗಿಸಿದ ಬೆನ್ನಲ್ಲೇ ಬೆಸ್ಕಾಂ ಎಇಇ ನೇತೃತ್ವದ ಅಧಿಕಾರಿಗಳ ತಂಡ ಮನೆಗೆ ಆಗಮಿಸಿ, ಪರಿಶೀಲನೆ ನಡೆಸಿತ್ತು. ಮನೆಯ ಯಜಮಾನನಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.