PLACE YOUR AD HERE AT LOWEST PRICE
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ.
ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ, ಹಾಸನ, ಚಿತ್ರದುರ್ಗ ಸೇರಿದಂತೆ ಒಟ್ಟಾಗಿ 56 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯಕ್ತ ದಾಳಿ ನಡೆದಿದೆ.
ಒಟ್ಟಾಗಿ ಒಂಬತ್ತು ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು ಈ ಕಾರ್ಯಾಚರಣೆಯಲ್ಲಿ ಸುಮಾರು 100ರಷ್ಟು ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಲೋಕಾಯುಕ್ತ ದಾಳಿ ನಡೆಸಿದ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ದಾಖಲಿಸಿದ್ದಾರೆ. ಬಳಿಕ ಶೋಧ ಕಾರ್ಯಾಚರಣೆ ವಾರೆಂಟ್ ಪಡೆದು ಸದ್ಯ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಿಬಿಎಂಪಿ ಕೆಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಾಗಿ, ಹಾಸನದ ಗ್ರಾಮ ಪಂಚಾಯಿತಿಯೊಂದರ ಗ್ರೇಡ್-1 ಕಾರ್ಯದರ್ಶಿ ಎನ್.ಎಂ. ಜಗದೀಶ್, ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹದೇವ್ ಬೆನ್ನೂರು, ದಾವಣಗೆರೆಯ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್. ಉಮೇಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಸ್. ಪ್ರಭಾಕರ ಮನೆ, ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ.
ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ್ ಗೌಡ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಶಿವರಾಜು ಎಸ್., ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್ ಎಂಜಿನಿಯರ್ ಮಹೇಶ್ ಕೆ., ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಕೆ.ಜಿ. ಜಗದೀಶ್, ಕೋಲಾರದ ತಹಶೀಲ್ದಾರ್ ವಿಜಯಣ್ಣ, ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್ ಎಂ.ರವೀಂದ್ರ ಅವರ ಮನೆ, ಇತರೆ ಆಸ್ತಿಗಳ ಮೇಲೆ ದಾಳಿಯಾಗಿದೆ.