• Sun. Sep 8th, 2024

PLACE YOUR AD HERE AT LOWEST PRICE

ಕರ್ನಾಟಕದಲ್ಲಿ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ 50ರಿಂದ 75%ವರೆಗೆ ಮೀಸಲಾತಿ ನೀಡಬೇಕೆಂಬ ನಿಮಯ ರೂಪಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಬಗ್ಗೆ ‘ಎಕ್ಸ್‌’ನಲ್ಲಿ ಮಾಹಿತಿ ನೀಡಿರುವ ಸಂತೋಷ್ ಲಾಡ್, “ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು‌ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ. ಈ ವಿಧೇಯಕದ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮಾಹಿತಿ ಹಂಚಿಕೊಂಡಿದ್ದು, “ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ” ಎಂದು ತಿಳಿಸಿದ್ದಾರೆ.

“ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷಗಳಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತಾಡಲು, ಓದಲು ಹಾಗೂ ಬರೆಯಲು ಬರುವವರು ಕನ್ನಡಿಗರ ಮೀಸಲಾತಿಗೆ ಅರ್ಹರಿರಲಿದ್ದಾರೆ. ಕನ್ನಡಿಗರಿಗೆ ಉದ್ಯೋಗ ನೀಡುವ ಮೀಸಲಾತಿ ನಿಯಮವನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಮಸೂದೆಯಲ್ಲಿ ಹೇಳಲಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

You missed

error: Content is protected !!