• Thu. Sep 19th, 2024

PLACE YOUR AD HERE AT LOWEST PRICE

ಯಾವುದೇ ಭೂಮಿಯನ್ನು ತನ್ನ ಸ್ವಂತ ಆಸ್ತಿ ಎಂದು ಘೋಷಿಸುವ ವಕ್ಫ್ ಮಂಡಳಿಯ ಪರಮಾಧಿಕಾರವನ್ನು ಕಡಿತಗೊಳಿಸುವುದು ಸೇರಿದಂತೆ ವಕ್ಫ್ ಕಾಯ್ದೆಯಲ್ಲಿ ಹಲವಾರು ತಿದ್ದುಪಡಿಗಳನ್ನು ತರುವ ಮಸೂದೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಮಸೂದೆಯು ವಕ್ಫ್ ಕಾಯ್ದೆಯಲ್ಲಿ ಸುಮಾರು 40 ತಿದ್ದುಪಡಿಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ ಎಂದು ವರದಿಗಳು ತಿಳಿಸಿವೆ.

ಕರಡು ಮಸೂದೆಯು ಪ್ರಸ್ತಾಪಿಸಿದ ಪ್ರಮುಖ ತಿದ್ದುಪಡಿಗಳಲ್ಲಿ ವಕ್ಫ್ ಬೋರ್ಡ್‌ಗಳ ಪುನರ್‌ ರಚನೆ, ಮಂಡಳಿಗಳ ಸಂಯೋಜನೆಯನ್ನು ಬದಲಾಯಿಸುವುದು ಮತ್ತು ಮಂಡಳಿಯು ವಕ್ಫ್‌ ಆಸ್ತಿ ಎಂದು ಘೋಷಿಸುವ ಮೊದಲು ಭೂಮಿಯ ಪರಿಶೀಲನೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಕಾಯ್ದೆಯ ಕೆಲವು ಷರತ್ತುಗಳನ್ನು ರದ್ದುಗೊಳಿಸುವುದು ಸೇರಿದೆ.

ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಬದಲಾಯಿಸುವುದು ಮತ್ತು ಅವುಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು ಸೆಕ್ಷನ್ 14ಕ್ಕೆ ತಿದ್ದುಪಡಿ ತರುವುದು ಮತ್ತು ರಾಜ್ಯ ವಕ್ಫ್ ಮಂಡಳಿಗಳು ತನ್ನದೆಂದು ಹೇಳಿಕೊಂಡಿರುವ ವಿವಾದಿತ ಭೂಮಿಯನ್ನು ಹೊಸದಾಗಿ ಪರಿಶೀಲಿಸಲು ಮಸೂದೆಯು ಪ್ರಸ್ತಾಪಿಸಿದೆ ಎಂದು ತಿಳಿದು ಬಂದಿದೆ.

ದೆಹಲಿ ವಕ್ಫ್ ಬೋರ್ಡ್ ತನ್ನದೆಂದು ಹೇಳಿಕೊಂಡಿದ್ದ123 ಆಸ್ತಿಗಳ ಭೌತಿಕ ತಪಾಸಣೆಯನ್ನು ಕೇಂದ್ರ ಸರ್ಕಾರವು ನಡೆಸಬಹುದು ಎಂದು ಕಳೆದ ವರ್ಷ ಮೇನಲ್ಲಿ ದೆಹಲಿ ಹೈಕೋರ್ಟ್ ಆದೇಶಿಸಿತ್ತು. ಅದರ ನಂತರ, ಕಳೆದ ವರ್ಷ ಆಗಸ್ಟ್ ನಲ್ಲಿ, ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಈ ಎಲ್ಲಾ ಆಸ್ತಿಗಳಿಗೆ ನೋಟಿಸ್ ನೀಡಿತ್ತು.

ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ತಮಿಳುನಾಡಿನ ಒಂದು ಪ್ರಕರಣ ಸಮರ್ಥಿಸುತ್ತದೆ ಎಂದಿರುವ ವರದಿಗಳು, ಸೆಪ್ಟೆಂಬರ್ 2022ರಲ್ಲಿ ತಮಿಳುನಾಡು ವಕ್ಫ್ ಮಂಡಳಿಯು ಬಹುಪಾಲು ಹಿಂದೂ ಜನಸಂಖ್ಯೆಯನ್ನು ಹೊಂದಿರುವ ತಿರುಚೆಂದೂರೈ ಎಂಬ ಸಂಪೂರ್ಣ ಗ್ರಾಮದ ಮಾಲೀಕತ್ವ ತನ್ನದೆಂದು ಹೇಳಿತ್ತು ಎಂದಿದೆ.

ಪ್ರಸ್ತುತ, ದೇಶದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 30 ವಕ್ಫ್ ಮಂಡಳಿಗಳಿವೆ. 1995ರಲ್ಲಿ ವಕ್ಫ್ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಅದಕ್ಕೆ 2013ರಲ್ಲಿ ಕೆಲ ತಿದ್ದುಪಡಿ ತರಲಾಗಿತ್ತು. ಬಿಜೆಪಿ ಮತ್ತು ಸಂಘಪರಿವಾರ ಈ ವಕ್ಫ್‌ ಕಾಯ್ದೆ ಮತ್ತು ಮಂಡಳಿಗಳನ್ನು ವಿರೋಧಿಸುತ್ತಾ ಬಂದಿವೆ.

ಬದಲಾವಣೆ ಒಪ್ಪಲು ಸಾಧ್ಯವಿಲ್ಲ : ವೈಯಕ್ತಿಕ ಕಾನೂನು ಮಂಡಳಿ

ವಕ್ಫ್‌ ಕಾಯ್ದೆಗೆ ತಿದ್ದುಪಡಿ ತಂದು ವಕ್ಫ್ ಮಂಡಳಿಗಳ ಅಧಿಕಾರವನ್ನು ಕಡಿತಗೊಳಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಾನುವಾರ ಹೇಳಿದೆ.

ವಕ್ಫ್ ಮಂಡಳಿಗೆ ಇರುವ ಕಾನೂನಿನ ಮಾನ್ಯತೆಯನ್ನು ಹಾಳುಮಾಡುವ ತಿದ್ದುಪಡಿಗಳನ್ನು ಎಂದಿಗೂ ಒಪ್ಪಲು ಸಾಧ್ಯವಿಲ್ಲ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಕ್ತಾರ ಸೈಯದ್ ಖಾಸಿಂ ರಸೂಲ್ ಇಲ್ಯಾಸ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!