• Mon. Sep 16th, 2024

PLACE YOUR AD HERE AT LOWEST PRICE

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿಯನ್ನು ಕೇಳಿದ್ದರು. ಶನಿವಾರ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ನೀಡಿರುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಡತವನ್ನು ರಾಜ್ಯಪಾಲರ ಕಛೇರಿಯಿಂದ ಕಳಿಸಲಾಗಿದೆ. ಅಲ್ಲದೇ ದೂರುದಾರ ಟಿ. ಜೆ. ಅಬ್ರಾಹಂಗೆ ರಾಜಭವನಕ್ಕೆ ಮತ್ತಷ್ಟು ದಾಖಲೆಗಳ ಜೊತೆ ಬರುವಂತೆ ದೂರವಾಣಿ ಕರೆ ಮಾಡಲಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಟಿ. ಜೆ. ಅಬ್ರಾಹಂ, “ರಾಜಭವನದಿಂದ ತಮಗೆ ದೂರವಾಣಿ ಕರೆ ಬಂದಿದೆ” ಎಂದು ಹೇಳಿದ್ದಾರೆ. ಮಡಿಕೇರಿಯಲ್ಲಿರುವ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣದಲ್ಲಿ ಸಂಕಷ್ಟ ಎದುರಾಗಿದೆ. ಈಗ ಕರ್ನಾಟಕ ಸರ್ಕಾರ, ಸಿದ್ದರಾಮಯ್ಯ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಕುತೂಹಲ ಮೂಡಿಸಿದ್ದ ನಡೆ:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲಾಗಿತ್ತು. ಈ ವಿಚಾರದಲ್ಲಿ ರಾಜ್ಯಪಾಲರ ನಡೆ ಕುತೂಹಲಕ್ಕೆ ಕಾರಣವಾಗಿತ್ತು.

ಈ ವಿಚಾರದ ಕುರಿತು ಚರ್ಚೆ ನಡೆಯುವಾಗಲೇ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ದೆಹಲಿಗೆ ತೆರಳಿದ್ದರು. ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಟಿ. ಜೆ. ಅಬ್ರಾಹಂ ಜುಲೈ 26ರಂದು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಮರುದಿನವೇ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೋಟಿಸ್ ನೀಡಿದ್ದರು.

ಮೈಸೂರಿನಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ನೋಟಿಸ್‌ಗೆ ವಿವರಣೆಯನ್ನು ನೀಡಿದ್ದರು. ಅಲ್ಲದೇ ಆಗಸ್ಟ್ 1ರಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಮಂತ್ರಿ ಪರಿಷತ್ ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ನೋಟಿಸ್ ನೀಡಿದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಈ ವಿಚಾರದ ಕುರಿತು ಮಾತನಾಡಿದ್ದ ಡಿ. ಕೆ. ಶಿವಕುಮಾರ್, “ರಾಜ್ಯಪಾಲರು ನೀಡಿರುವ ನೋಟಿಸ್ ಕಾನೂನು ಮತ್ತು ಸಂವಿಧಾನ ಬಾಹಿರ. ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸುವ, ಬುಡಮೇಲು ಮಾಡುವ ಪ್ರಯತ್ನಕ್ಕೆ ರಾಜಭವನನ್ನು ಬಳಕೆ ಮಾಡಿಕೊಂಡು ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಕೈಗೊಂಬೆಯಾಗಿ ಬಳಸಿಕೊಳ್ಳುತ್ತಿದೆ” ಎಂದು ದೂರಿದ್ದರು.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನ ಕರ್ನಾಟಕದಲ್ಲಿ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುವ ನಿರೀಕ್ಷೆ ಇದೆ. ಈಗಾಗಲೇ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರು ತನಕ ‘ಮೈಸೂರು ಚಲೋ’ ಪಾದಯಾತ್ರೆ ನಡೆಸಿದ್ದವು.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಕುರಿತು ಹಲವು ದಿನಗಳಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದರು. ಶನಿವಾರ ಅಂತಿಮವಾಗಿ ಈ ಕುರಿತು ತೀರ್ಮಾನವನ್ನು ಕೈಗೊಂಡಿದ್ದಾರೆ. ಈಗ ರಾಜ್ಯ ಸರ್ಕಾರದ ನಡೆ ಏನು? ಎಂಬುದು ಕುತೂಹಲ ಮೂಡಿಸಿದೆ.

ಶೋಕಾಸ್ನೋಟಿಸ್:

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಟಿ. ಜೆ. ಅಬ್ರಾಹಂ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಉಲ್ಲೇಖ ಮಾಡಿ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದರು. ಮುಡಾ ನಿವೇಶನ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ನಿಮ್ಮ ವಿರುದ್ಧ ದಾಖಲಾಗಿರುವ ದೂರಿನ ಅಡಿ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಏಕೆ ಅನುಮತಿ ನೀಡಬಾರದು?. ನಿಮ್ಮ ಮೇಲಿನ ಆರೋಪಗಳು ಗಂಭೀರ ಸ್ವರೂಪದವು ಮತ್ತು ಆ ಆರೋಪಗಳು ನಿಜ ಎಂಬುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ.

ಹೀಗಾಗಿ ನಿಮ್ಮ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಬಂದಿರುವ ಮನವಿಯ ಆಧಾರದಲ್ಲಿ ನೋಟಿಸ್ ನೀಡಲಾಗುತ್ತಿದೆ. ಏಳು ದಿನದ ಒಳಗೆ ಉತ್ತರ ನೀಡಿ, ಉತ್ತರ ಪುಷ್ಟೀಕರಿಸುವ ದಾಖಲೆಗಳನ್ನು ಸಲ್ಲಿಸಿ ಎಂದು ರಾಜ್ಯಪಾಲರು ನೋಟಿಸ್‌ನಲ್ಲಿ ವಿವರಣೆ ನೀಡಿದ್ದರು.

Leave a Reply

Your email address will not be published. Required fields are marked *

You missed

error: Content is protected !!